ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಪ್ರಸ್ತಾಪವಾಗಿತ್ತು.
ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಬೇಡವೆಂದು ನಾನು ಹೇಳಿದ್ದೆ. ಜೆಡಿಎಸ್ ಜೊತೆ ಮೈತ್ರಿಯಿಂದ ನಿರೀಕ್ಷಿಸಿದ ಹಾಗೆ ಮತ ಧೃವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7- 8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ತಿಳಿಸಿದ್ದಾರೆ.
ಸಿದ್ಧರಾಮಯ್ಯ ಈಗ ಲೋಕಸಭೆ ಚುನಾವಣೆಯಲ್ಲಿನ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಪ್ರಸ್ತಾಪಿಸಿರುವುದು ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ರಾಜ್ಯಸಭೆಗೆ ಪ್ರವೇಶಿಸಿದ್ದಾರೆ. ಡಿ.ಕೆ. ಶಿವಕುಮಾರ್ ಜೆಡಿಎಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ಸಿದ್ಧರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಾತನಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.