ಬೆಂಗಳೂರು: ರಾಜ್ಯದ ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆ ಸೌಲಭ್ಯವಿಲ್ಲದ 65 ಲಕ್ಷ ಮನೆಗಳಿಗೆ ಮೂರು ವರ್ಷಗಳಲ್ಲಿ ಮನೆಮನೆಗೆ ಗಂಗೆ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಕುರಿತು ಮಾತನಾಡಿ, ಆಗಸ್ಟ್ ನಲ್ಲಿ ಯೋಜನೆ ಲೋಕಾರ್ಪಣೆಗೊಳ್ಳಲಿದೆ. ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಮನೆಮನೆಗೆ ನಲ್ಲಿ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನೀರು ಪೂರೈಕೆ ಯೋಜನೆ ಕುರಿತು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮುಖ್ಯ ಇಂಜಿನಿಯರ್ ಗಳೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅವರು, ಗ್ರಾಮೀಣ ಭಾಗದಲ್ಲಿ ಸುಮಾರು 90 ಲಕ್ಷ ಮನೆಗಳಿಗೆ 25 ಲಕ್ಷ ಮನೆಗಳಿಗೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನೀರಿನ ಸಂಪರ್ಕವಿಲ್ಲದ ಮನೆಗಳಿಗೆ ಮನೆಮನೆಗೆ ಗಂಗೆ ಯೋಜನೆಯಡಿ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಮುಂದಿನ ಮೂರು ವರ್ಷದೊಳಗೆ 65 ಲಕ್ಷ ಮನೆಗಳಿಗೆ ನೀರು ಪೂರೈಕೆ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತಲಾ 4000 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.