ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.
ಜನರ ನಂಬಿಕೆಯನ್ನೇ ಮೂಢನಂಬಿಕೆಯಾಗಿ ಪರಿವರ್ತಿಸಿ ಟ್ರಸ್ಟ್ ಹೆಸರಿನಲ್ಲಿ ಅಪಾರ ಪ್ರಮಾಣದ ಹಣ ಲೂಟಿ ಹೊಡೆಯುವ ಕೆಲಸ ನಡೆಯುತ್ತಿದೆ. ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಪಾರ ಪ್ರಮಾಣದಲ್ಲಿ ಆದಾಯ ಹರಿದು ಬರುತ್ತಿದ್ದು ಲೆಕ್ಕಪತ್ರಗಳ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂದು ದೂರಿದ್ದು, ದೇವಸ್ಥಾನದ ಆಡಳಿತವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಆಡಳಿತ ನಿರ್ವಹಣೆಗಾಗಿ ಒಂದು ಕುಟುಂಬದವರೇ ಪ್ರಮುಖ ಸ್ಥಾನದಲ್ಲಿರುವ ಟ್ರಸ್ಟ್ ರಚನೆ ಮಾಡಲಾಗಿದೆ. ದೇವರು ಮತ್ತು ಧರ್ಮದ ಮೇಲಿನ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ಅಪಾರ ಪ್ರಮಾಣದ ಹಣ ಲೂಟಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಸಿಗಂದೂರು ದೇವಾಲಯದ ಸುತ್ತಮುತ್ತ ಕಾನೂನುಬಾಹಿರವಾಗಿ ಕಟ್ಟಡ ನಿರ್ಮಿಸಲಾಗಿದೆ. ಸೊಪ್ಪಿನಬೆಟ್ಟ, ಕಾನು ಪ್ರದೇಶದಲ್ಲಿ ಕಟ್ಟಡ ಕಟ್ಟಲಾಗಿದ್ದು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.