ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದಲ್ಲಿ 30 ದಿನದ ಹೆಣ್ಣುಮಗುವನ್ನು ತಂದೆ-ತಾಯಿಯೇ ಹತ್ಯೆಮಾಡಿದ ಆರೋಪ ಕೇಳಿಬಂದಿದೆ.
ಆಗಸ್ಟ್ 2 ರಂದು ರಾತ್ರಿ ಮನೆಯಲ್ಲಿದ್ದ ಮಗುವನ್ನು ಯಾರೊ ಎತ್ತಿಕೊಂಡು ಹೋಗಿ ಬಾವಿಯಲ್ಲಿ ಹಾಕಿ ಕೊಲೆ ಮಾಡಿರುವುದಾಗಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ 30 ದಿನಗಳ ಹಿಂದೆ ಜನಿಸಿದ ಹೆಣ್ಣು ಮಗುವನ್ನು ಕೊಲೆ ಮಾಡಿದ ರಹಸ್ಯವನ್ನು ಬಯಲಿಗೆಳೆದಿದ್ದಾರೆ. ತಂದೆ-ತಾಯಿಯೇ ಹೆಣ್ಣು ಮಗು ಎಂಬ ಕಾರಣಕ್ಕೆ ಬಾವಿಗೆ ಹಾಕಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.