ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಕೊರೋನಾ ಸೋಂಕಿತ ಪರಾರಿಯಾಗಿದ್ದು ಆತಂಕ ಮೂಡಿಸಿದೆ. ತುಮಕೂರಿನಿಂದ ಕೋಲಾರಕ್ಕೆ ಆಗಮಿಸಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಆರೋಗ್ಯ ಇಲಾಖೆ ಅಧಿಕಾರಿಗಳು ಆತನ ರಕ್ತ ಮತ್ತು ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಶನಿವಾರ ಪರೀಕ್ಷೆ ವರದಿ ಬಂದಿದ್ದು ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಆತನನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು ಈ ವೇಳೆ ನಾನೇ ಆಸ್ಪತ್ರೆಗೆ ಬರುತ್ತೇನೆ ಎಂದು ಹೇಳಿದ ಆತ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆತ ಕ್ವಾರಂಟೈನ್ ಭಯದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.