ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಒಟ್ಟು 523 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 20 ರಿಂದ ಸೆಪ್ಟಂಬರ್ 19 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 21 ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಪರೀಕ್ಷೆ ದಿನಾಂಕವನ್ನು ನಂತರ ತಿಳಿಸಲಾಗುವುದು.
ಪದವಿ, ಪಿಯುಸಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕ ಸೆಪ್ಟಂಬರ್ 19ರೊಳಗೆ ಚಾಲ್ತಿಯಲ್ಲಿರುವಂತೆ ಕಡ್ಡಾಯವಾಗಿ ಪಡೆದಿಟ್ಟಕೊಂಡಿರಬೇಕಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂಪಾಯಿ ಶುಲ್ಕ ನಿಗದಿ ಮಾಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ವಿನಾಯಿತಿ ನೀಡಲಾಗಿದೆ.
ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಒಂದೇ ಶುಲ್ಕವನ್ನು ಪಾವತಿಸತಕ್ಕದ್ದು ಎಂದು ಹೇಳಲಾಗಿದೆ. ಮಾಹಿತಿಗಾಗಿ http://www.kpsc.kar.nic.in/ ವೆಬ್ ಸೈಟ್ ಗಮನಿಸುವುದು.