ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್ಡೌನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಆದರೆ, ಲಾಕ್ಡೌನ್ ಮತ್ತೆ ವಿಸ್ತರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದು ಪರ್ಯಾಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಪರಿಹಾರವಲ್ಲ. ಮತ್ತೆ ಲಾಕ್ಡೌನ್ ಜಾರಿ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಮತ್ತು ಅನೇಕ ಜನಪ್ರತಿನಿಧಿಗಳು ಲಾಕ್ಡೌನ್ ವಿಸ್ತರಣೆ ಬಗ್ಗೆ ಮನವಿ ಮಾಡಿದ್ದು, ಇದಕ್ಕೆ ಸಿಎಂ ಸಮ್ಮತಿಸಿಲ್ಲ. ಲಾಕ್ಡೌನ್ ಜಾರಿ ಮಾಡದೇ ಕೊರೊನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.