ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.
ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಿದೆ. ಅದೇ ರೀತಿ ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಬೇಕೆಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೊಳಿಸಬೇಕು ಹಿಂದಿನ ಲೋಪದೋಷಗಳನ್ನು ಸರಿಪಡಿಸಿಕೊಂಡು ಸಮರ್ಥವಾಗಿ ಸೋಂಕು ಎದುರಿಸಲು ಎಲ್ಲ ತಯಾರಿ ಕೈಗೊಳ್ಳಬೇಕೆಂದು ಹೇಳಿದ್ದಾರೆ. ರಾಜ್ಯದ ಕಲ್ಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕನಿಷ್ಠ 15 ದಿನ ಕಠಿಣ ಲಾಕ್ಡೌನ್ ಜಾರಿಗೊಳಿಸಬೇಕೆಂದು ಹೇಳಿದ್ದಾರೆ.
ಅದೇ ರೀತಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಯು.ಟಿ. ಖಾದರ್, ಎಂ.ಬಿ. ಪಾಟೀಲ್ ಸೇರಿದಂತೆ ಹಲವರು ಲಾಕ್ ಡೌನ್ ಜಾರಿಗೆ ಒತ್ತಾಯಿಸಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಭೆಯಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಚರ್ಚಿಸಿ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.