ಬೆಂಗಳೂರು: ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಕಣದಿಂದ ಹಿಂದೆ ಸರಿಯುವಂತೆ ಶ್ರೀನಿವಾಸ್ ಗೆ ಸೂಚನೆ ನೀಡಿದ್ದರು. ಆದರೆ ಪಕ್ಷದ ಸೂಚನೆ ಕಡೆಗಣಿಸಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಶ್ರೀನಿವಾಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆಗ್ನೇಯ ಪದವೀಧರ ಕ್ಷೇತ್ರದಿಂದಲೂ ಟಿಕೆಟ್ ಬಯಸಿದ್ದು, ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದಾರೆ. ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಕಾರಣದಿಂದ ಅವರನ್ನು ಉಚ್ಚಾಟಿಸಲಾಗಿದೆ ಎಂದು ಹೇಳಲಾಗಿದೆ.