
ಬೆಂಗಳೂರು: ಜಿದ್ದಾಜಿದ್ದಿನ ಕಣವಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ.
ಮುನಿರತ್ನ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದು, ಅವರನ್ನು ಅನರ್ಹಗೊಳಿಸಬೇಕೆಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ತೆರಳಿದ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಮುನಿರತ್ನ ನಕಲಿ ವೋಟರ್ ಐಡಿ ಸೃಷ್ಟಿಸಿದ್ದು, ಅವರ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಜನಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿ ನಡೆದುಕೊಂಡಿದ್ದು, ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗದಿಂದ ದೂರು ನೀಡಲಾಗಿದೆ.