ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು ಪರಿಗಣಿಸಿದ ಕೋರ್ ಕಮಿಟಿ ಸಭೆ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು ಗೌಡ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಲು ತೀರ್ಮಾನಿಸಿ ಇಬ್ಬರ ಹೆಸರನ್ನು ಕೇಂದ್ರ ಸಮಿತಿಗೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.
ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು ಸುಲಭವಾಗಿ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಮುನಿರತ್ನ ಹೆಸರನ್ನು ಮಾತ್ರ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಬೇಕೆಂದು ಸಿಎಂ ಯಡಿಯೂರಪ್ಪ ಪಟ್ಟು ಹಿಡಿದಿದ್ದು ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು ಗೌಡ ಅವರ ಹೆಸರನ್ನು ಕಳುಹಿಸಲು ಸಲಹೆ ನೀಡಿದ್ದಾರೆ. ಸರ್ಕಾರ ರಚನೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುನಿರತ್ನ ಅವರಿಗೆ ಮಾತು ಕೊಟ್ಟಿದ್ದು ಅವರಿಗೆ ಟಿಕೆಟ್ ಕೊಡಬೇಕು ಎಂದು ಸಿಎಂ ಹೇಳಿದ್ದಾರೆ. ತುಳಸಿ ಮುನಿರಾಜು ಗೌಡ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಅವರನ್ನು ಕೈಬಿಡುವ ಪ್ರಶ್ನೆಯೆ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅಂತಿಮವಾಗಿ ಇಬ್ಬರ ಹೆಸರನ್ನು ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.