ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದ್ದಾರೆ.
ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪರಿಸ್ಥಿತಿಯ ಬಗ್ಗೆ ಮತ್ತು ನಿವಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಗೃಹಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ದೇಶದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಗರಿಷ್ಠ ಏರಿಕೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಹಾಗೂ ಸವಾಲುಗಳನ್ನು ಎದುರಿಸಲು ಆರೋಗ್ಯ ಪರೀಕ್ಷೆ, ಸೌಲಭ್ಯಗಳ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗಿದೆ.
ದೆಹಲಿ, ಮುಂಬೈ ಮತ್ತು ಅಹಮದಾಬಾದ್ ನಂತಹ ದೊಡ್ಡ ನಗರಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಆಸ್ಪತ್ರೆಗಳು, ಹಾಸಿಗೆ, ವೈದ್ಯಕೀಯ ಸೌಲಭ್ಯ ಅಗತ್ಯತೆಗಳು, ತುರ್ತು ವೈದ್ಯಕೀಯ ನಿರ್ವಹಣೆ ಯೋಜನೆಯ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಮಟ್ಟದಲ್ಲಿ ಕೊರೋನಾ ನಿರ್ಮೂಲನೆ ಮತ್ತು ಚಿಕಿತ್ಸೆಗೆ ಅಗತ್ಯ ಸೌಲಭ್ಯ ಒದಗಿಸಬೇಕು, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.