ಕೊರೊನಾ ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಶಿಕ್ಷಣ ಸಂಸ್ಥೆಗಳು, ಬರೋಬ್ಬರಿ 9 ತಿಂಗಳುಗಳ ಬಳಿಕ ಹಂತ ಹಂತವಾಗಿ ಆರಂಭವಾಗುತ್ತಿದೆ. ಈಗಾಗಲೇ 10 ಮತ್ತು 12ನೇ ತರಗತಿಗಳು ನಡೆಯುತ್ತಿದ್ದು, ಜೊತೆಗೆ ವಿದ್ಯಾಗಮ ಸಹ ಆರಂಭವಾಗಿದೆ.
ಮುಂದಿನ ದಿನಗಳಲ್ಲಿ ಎಲ್ಲ ತರಗತಿಗಳು ಆರಂಭವಾಗುವ ನಿರೀಕ್ಷೆಯಿದ್ದು, ಈ ಮಧ್ಯೆ ಖಾಸಗಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳಿಂದ ಕೊರೊನಾ ಪೂರ್ವದಲ್ಲಿ ಇದ್ದಂತೆ ಶುಲ್ಕ ವಸೂಲಾತಿ ಮಾಡುತ್ತಿರುವ ಕ್ರಮ ಸರ್ಕಾರ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಬುಧವಾರದಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆಯನ್ನು ಆನ್ ಲೈನ್ ಮೂಲಕವೇ ನಿರ್ವಹಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.