
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ.
ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಉತ್ತಿರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ.
2020 ರ ಫೆಬ್ರವರಿಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜುಲೈ 13 ಕ್ಕೆ ಮೊದಲು ಹೊರಡಿಸಲಾದ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು ಎಂದು ಹೇಳಲಾಗಿದೆ.
ಪಾಸಾಗಲು ಅಗತ್ಯ ಅಂಕಗಳನ್ನು ನೀಡಿ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಫಲಿತಾಂಶಕ್ಕೆ ಜಿಲ್ಲಾ ಉಪನಿರ್ದೇಶಕರ ಅನುಮೋದನೆ ಪಡೆಯಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.