ಬೆಂಗಳೂರು: ರಾಜ್ಯದ ಹಲವೆಡೆ ಭಾನುವಾರ ಭಾರಿ ಮಳೆಯಾಗಿದ್ದು, ಶಿವಮೊಗ್ಗ ಸೇರಿ ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿದೆ.
ಅರಬ್ಬಿಸಮುದ್ರದ ಆಗ್ನೇಯ ಮತ್ತು ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಸೋಮವಾರದಿಂದ ನಾಲ್ಕು ದಿನ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಪ್ರದೇಶದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಒಳನಾಡು ಭಾಗದ ಕೊಡಗು, ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಚಾಮರಾಜನಗರ, ಶಿವಮೊಗ್ಗ, ತುಮಕೂರು, ಉತ್ತರ ಒಳನಾಡಿನ ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.