ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದರ ಮಧ್ಯೆ ಜನಪ್ರತಿನಿಧಿಯೊಬ್ಬರು ಅದ್ದೂರಿ ಹುಟ್ಟುಹಬ್ಬ ಮಾಡಿಕೊಂಡಿರುವುದು ಈಗ ಅಚ್ಚರಿಗೆ ಕಾರಣವಾಗಿದೆ.
ಹೌದು, ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ್ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸರ್ಕಾರದ ಎಲ್ಲಾ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ. ಇದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಅರುಣ್ ಕುಮಾರ್ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗಿಲ್ಲ. ಜೊತೆಗೆ ಅಲ್ಲಿದ್ದವರು ಮಾಸ್ಕ್ ಕೂಡ ಧರಿಸಿಲ್ಲ. ಮುನ್ನೆಚ್ಚರಿಕೆಯನ್ನು ಮರೆತು ಶಾಸಕರ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಮುಳುಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದೆ.