ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಸರ್ಕಾರ ತಡೆ ನೀಡಿದೆ. ಇದರಿಂದಾಗಿ ಆಕಾಂಕ್ಷಿಗಳಿಗೆ ಭಾರಿ ನಿರಾಸೆಯಾಗಿದೆ.
ಪ್ರಾಂಶುಪಾಲರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸಂದರ್ಶನ ನಡೆಸದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದ್ದು, ಇದರಿಂದ ಪರೀಕ್ಷೆ ಅಕ್ರಮಕ್ಕೆ ಕಡಿವಾಣ ಹಾಕಿ ಪ್ರತಿಭಾನ್ವಿತರಿಗೆ ಅವಕಾಶ ಮಾಡಿಕೊಡುವುದು ಸರ್ಕಾರದ ಉದ್ದೇಶವಾಗಿತ್ತು.
ಕೊರೋನಾ ಕಾರಣದಿಂದ ಹೊಸ ಹುದ್ದೆಗಳ ಮಂಜೂರಾತಿ, ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಲ್ಲವೆನ್ನಲಾಗಿದೆ. ಆರ್ಥಿಕ ಸಂಪನ್ಮೂಲ ಸಂಗ್ರಹ ಕುಂಠಿತವಾಗಿರುವುದರಿಂದ ಹೊಸ ನೇಮಕಾತಿ ತಡೆಹಿಡಿಯುವಂತೆ ಆರ್ಥಿಕ ಇಲಾಖೆ ಸೂಚಿಸಿದೆ.
ಆದರೆ, ಈಗಾಗಲೇ ನೇಮಕಾತಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಫೆಬ್ರವರಿಯಲ್ಲೇ ಈ ಕುರಿತಾಗಿ ಅಧಿಸೂಚನೆ ಹೊರಡಿಸಿರುವುದರಿಂದ ನೇಮಕಾತಿಗೆ ಅನುಮತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.