ಬೆಂಗಳೂರು: ಶಾಲೆಗಳ ಆರಂಭ ಕುರಿತಾಗಿ ಪೋಷಕರು ಅಭಿಪ್ರಾಯ ನೀಡಿದ್ದು ಈ ಅಭಿಪ್ರಾಯಗಳ ವರದಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಕ್ಷಣ ಇಲಾಖೆಗೆ ನೀಡಿದ್ದಾರೆ.
ಪೋಷಕರ ಅಭಿಪ್ರಾಯಗಳನ್ನು ಪರಿಶೀಲಿಸಿದ ನಂತರ ಸರ್ಕಾರ ಶಾಲೆಗಳ ಆರಂಭದ ಬಗ್ಗೆ ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪೋಷಕರ ಅಭಿಪ್ರಾಯ ಪಡೆಯಲು ತಿಳಿಸಿದ್ದರು.
ಅಂತೆಯೇ ಎಲ್ಲ ಶಾಲೆಗಳಲ್ಲಿಯೂ ಜೂನ್ 10 ರಿಂದ 12 ರವರೆಗೆ ಸಭೆ ನಡೆಸಿ ಪೋಷಕರಿಂದ ಅಭಿಪ್ರಾಯ ಪಡೆಯಲಾಗಿದೆ. ಜೂನ್ 20 ರೊಳಗೆ ಅಭಿಪ್ರಾಯಗಳನ್ನು ಕಳುಹಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು ಪೋಷಕರ ಅಭಿಪ್ರಾಯಗಳನ್ನು ಪಡೆದುಕೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳಿಂದ ಬಂದ ಪೋಷಕರ ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಆರಂಭಿಸಬಾರದೆಂದು ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳ ಆರಂಭವಾಗುವುದಿಲ್ಲ ಎಂದು ಹೇಳಲಾಗಿದೆ.