ಬೆಂಗಳೂರು: ಸದ್ಯ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜುಲೈ 29 ರಿಂದ ಕರಾವಳಿ ಮತ್ತು ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಮತ್ತು ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಕೋಲಾರ, ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜುಲೈ 29 ರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವೇಗದ ಗಾಳಿ ಬೀಸುತ್ತಿರುವುದರಿಂದ 2.8 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.