ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರಿಗೆ ಭಾನುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗಲಕ್ಷಣವಿಲ್ಲದ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಕೋವಿಡ್ ಸೆಂಟರ್ ಸಜ್ಜುಗೊಳಿಸಲಾಗಿದೆ. ಇಲ್ಲಿ 250 ಬೆಡ್ ಸೌಲಭ್ಯ ಲಭ್ಯವಿದೆ. ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಸದ್ಯ 30 ಮಂದಿ ಕೊರೋನಾ ಪಾಸಿಟಿವ್ ವ್ಯಕ್ತಿಗಳನ್ನು ಇಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 30 ಮಂದಿಯನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು. ಇದರಿಂದಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಲಕ್ಷಣವಿರುವ ಕೊರೋನಾ ಪಾಸಿಟಿವ್ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ನಗರ ಪ್ರದಕ್ಷಿಣೆ. ಲಾಕ್ ಡೌನ್ ಕಟ್ಟುನಿಟ್ಟಿನಿಂದ ಪಾಲನೆ
ಭಾನುವಾರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಹೊರಗೆ ಬಾರದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ತಿಂಗಳ ಎಲ್ಲಾ ಭಾನುವಾರ ಇದೇ ರೀತಿ ಲಾಕ್ಡೌನ್ ಜಿಲ್ಲೆಯಾದ್ಯಂತ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.