ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಅವರು ಗುರುವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದ ಎಲ್ಲೆಡೆ ಲಾಕ್‌ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯರು ತಾವೇ ಕರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಮುಂದೆ ಕರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬರುವ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸುವುದು, ಗುಂಪು ಸೇರದಿರುವುದು, ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರುವುದು ಮುಂತಾದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತೇಶ್ ಉಪಸ್ಥಿತರಿದ್ದರು.