ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗಲಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯನವರ ಚೇತರಿಕೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ. ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿ ಹೆಚ್ಚಿನ ಮುಂಜಾಗ್ರತೆ ಕ್ರಮಗಳನ್ನು ಚಾಚುತಪ್ಪದೇ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಸಿದ್ಧರಾಮಯ್ಯ ಅವರು ಆದಷ್ಟು ಬೇಗನೆ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಣಿಪಾಲ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುವುದಾಗಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೇಗ ಗುಣಮುಖರಾಗಿ ಬರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಚಿಕಿತ್ಸೆಗೆ ದಾಖಲಾಗಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.