ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಭಾರೀ ಬೆಳೆ ಹಾನಿಯಾಗಿದ್ದು ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳ ಸಮರ್ಪಕ ಸಮೀಕ್ಷೆ ಕೈಗೊಂಡು ಸರ್ಕಾರ ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಈ ವರ್ಷ ಮುಂಗಾರಿನಲ್ಲಿ ಬಿತ್ತನೆ ಮಾಡಲಾಗಿದ್ದ ಅನೇಕ ಬೆಳೆಗಳು ಕೊಳೆತು ಹೋಗಿವೆ. ಕೈಗೆ ಬಂದ ಈರುಳ್ಳಿ, ಹಸಿಮೆಣಸಿನಕಾಯಿ, ಜೋಳ ಮೊದಲಾದ ಬೆಳೆಗಳು ಹೊಲದಲ್ಲೇ ಕೊಳೆಯುತ್ತಿವೆ ಎಂದು ಹೇಳಿದ್ದಾರೆ.
ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಸುಮಾರು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಹಾಳಾಗಿದೆ. ದಕ್ಷಿಣ ಕರ್ನಾಟಕದಲ್ಲಿಯೂ ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಅಡಿಕೆ, ಮೆಣಸು, ಕಾಫಿ ಬೆಳೆ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ಸಮರ್ಪಕ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕು. ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರ ಬೆಳೆಗಳನ್ನು ಖರೀದಿ ಮಾಡದಂತೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.