ಬೀದರ್: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ಪ್ರವಾಹ ಬಂದಿದೆ. ರಾಜ್ಯದಲ್ಲಿ ಪ್ರವಾಸ ಬಂದ ಸಂದರ್ಭದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ವೈಮಾನಿಕ ಸಮೀಕ್ಷೆಯಿಂದ ಬೆಳೆಹಾನಿ ಗೊತ್ತಾಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಬಳಿ ನೇರವಾಗಿ ಹೋಗಿ ಮಾತನಾಡಬೇಕು. ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಸಂಕಷ್ಟ ಅರ್ಥವಾಗುತ್ತದೆ. ಅದನ್ನು ಬಿಟ್ಟು ವೈಮಾನಿಕ ಸಮೀಕ್ಷೆ ಮಾಡಿದರೆ ಅರ್ಥವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಿ ವಾಪಸಾಗಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಜನರ ಸಮಸ್ಯೆ ಏನೆಂದು ಯಾರು ಕೂಡ ಕೇಳಿಯೇ ಇಲ್ಲ. ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಇಷ್ಟೊಂದು ಕಷ್ಟವಾಗಿದ್ದರೂ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಒಂದು ನಯಾ ಪೈಸೆಯನ್ನು ಕೂಡ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.
ಪ್ರವಾಹದ ಸಂದರ್ಭಗಳಲ್ಲಿ ವಿಶೇಷ ಅಧಿವೇಶನ ಕರೆಯಬೇಕು. ಅಧಿವೇಶನ ಕರೆದು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಆದರೆ, ಈ ಸರ್ಕಾರ ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.