ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿಶೇಷ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಮಕ್ಕಳ ಸುರಕ್ಷತೆಯೊಂದಿಗೆ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗಾಗಿ ಅತ್ಯಂತ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿಕ್ಷಣ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಯಾವುದೇ ತೊಂದರೆ ಇಲ್ಲದೆ ನಿರಾತಂಕವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯಲಿರುವ 8.5 ಲಕ್ಷ ಮಕ್ಕಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಹಾಗೂ ವಿವಿಧ ಸಂಸ್ಥೆಗಳು ಮಾಸ್ಕ್ ನೀಡಿವೆ. ಪ್ರತಿ ವಿದ್ಯಾರ್ಥಿಗೆ 2 -3 ಮಾಸ್ಕ್ ಕೊಡಲಾಗುವುದು. ಪರೀಕ್ಷಾ ಕೊಠಡಿಗೆ ಆಗಮಿಸುವ ಮೊದಲು ಸ್ಯಾನಿಟೈಸರ್ ಬಳಕೆ, ಆರೋಗ್ಯ ತಪಾಸಣೆ ಮಾಡಲಿದ್ದು, ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯ ಲಕ್ಷಣ ಕಂಡು ಬಂದಲ್ಲಿ ಅಂತಹ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಕೂಡ ಸುಗಮವಾಗಿ ಪರೀಕ್ಷೆ ನಡೆಸಲು ಕೈ ಜೋಡಿಸಿವೆ. ಪರೀಕ್ಷೆ ಬರೆಯುವ ಮಕ್ಕಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.