ನವದೆಹಲಿ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಳಗಾವಿ ಮೂಲದ ರಾಜಶ್ರೀ ಅವರು ಪರೀಕ್ಷೆ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು ಇಂದು ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿದಂತೆ ಲಕ್ಷಾಂತರ ಜನರ ಆರೋಗ್ಯ ಅಪಾಯಕ್ಕೆ ಸಿಲುಕಿದೆ ಎನ್ನುವ ಅಂಶವನ್ನು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ. ಕೊರೋನಾ ಸೋಂಕಿನ ಆತಂಕ ಇರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.