ನವದೆಹಲಿ: ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದು ಬೆಳಗಾವಿಯ ರಾಜಶ್ರೀ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರರಾವ್, ಕೃಷ್ಣ ಮುರಾರಿ, ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದೆ.
ಸರ್ಕಾರ ಮತ್ತು ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಮುಂಜಾಗ್ರತೆ ಕ್ರಮಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿರುವ ಬಗ್ಗೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಮಾಹಿತಿ ನೀಡಿದ್ದಾರೆ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಮಾರ್ಗಸೂಚಿಗಳನ್ನು ನ್ಯಾಯಪೀಠ ಒಪ್ಪಿದ್ದು, ಸುಪ್ರೀಂಕೋರ್ಟ್ ಗೆ ರಾಜಶ್ರೀ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಿಂದ ಎಸ್ಎಸ್ಎಲ್ಸಿ ಪರೀಕ್ಷೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾದಂತಾಗಿದೆ. ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ.