ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.
ಪರಿಶಿಷ್ಟ ಜಾತಿಯವರಿಗೆ ಶೇಕಡ 2 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ ಎನ್ನಲಾಗಿದ್ದು ಕೊರೋನಾ ಸಂದರ್ಭದಲ್ಲಿ ಮೀಸಲಾತಿ ವಿಚಾರ ಬಿಜೆಪಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಾರಿ ಹೋರಾಟ ನಡೆಸಲಾಗಿತ್ತು. ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗವನ್ನು ರಚನೆ ಮಾಡಲಾಗಿತ್ತು.
ಹಾಲಿ ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇಕಡ 3ರಿಂದ ಶೇಕಡ 7ರಷ್ಟು ಹೆಚ್ಚಳ ಮಾಡಲು ಆಯೋಗ ಶಿಫಾರಸು ಮಾಡಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇಕಡ 2ರಷ್ಟು ಹೆಚ್ಚಳ ಮಾಡಿ ಶೇಕಡ 17ಕ್ಕೆ ಹೆಚ್ಚಳ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ನೀಡಲಾದ ಮೀಸಲಾತಿ ಪ್ರಮಾಣ ಶೇಕಡ 50 ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾ. ನಾಗಮೋಹನ್ ದಾಸ್ ಆಯೋಗ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ಸದ್ಯಕ್ಕೆ ಮೀಸಲಾತಿ ಹೆಚ್ಚಳ ವಿಚಾರದ ವರದಿಯನ್ನು ಸರ್ಕಾರ ಸದ್ಯಕ್ಕೆ ಬಹಿರಂಗಗೊಳಿಸದಿರಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ.