ಶಿವಮೊಗ್ಗ: ಎಸ್ಎಸ್ಎಲ್ಸಿ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿರುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಈಶ್ವರಮ್ಮ ಪ್ರೌಢಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕ, ಕುಮಾರ್ ಎನ್.ಎಂ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಶಿಕ್ಷಕರು ನೆರವು ನೀಡಿದ್ದಾರೆ.
ಕುಮಾರ್ ಅವರು ಅನುದಾನ ರಹಿತ ಸಂಸ್ಥೆ ನೌಕರರಾಗಿದ್ದು ಅವರ ಕುಟುಂಬಕ್ಕೆ ಆರ್ಥಿಕ ಸಹಾಯವನ್ನು ಶಿವಮೊಗ್ಗ ಜಿಲ್ಲೆಯ ವಿವಿಧ ವಿಷಯಗಳ 1800 ಪ್ರೌಢಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ಜಿಲ್ಲೆಯ ಉಪನಿರ್ದೇಶಕರು, ಶಿಕ್ಷಣಾಧಿಕಾರಿಗಳು, ಶಿವಮೊಗ್ಗದ ಪಿಯು ಉಪನ್ಯಾಸಕರು ಮತ್ತು ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಒಟ್ಟಾಗಿ 2,42,000 ರೂ. ಸಹಾಯ ಧನ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಅವರ ಮೂಲಕ ನೆರವು ನೀಡಲಾಗಿದೆ. ಮೃತರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿ ಸಹಾಯ ಮಾಡಿದ ಶಿಕ್ಷಕರು ಹಾಗೂ ಎಲ್ಲರನ್ನೂ ಜಿಪಂ ಸಿಇಒ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ಎನ್.ಎಂ. ರಮೇಶ್, ರಾಜ್ಯ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ್ ಅವರು ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾಧ್ಯಕ್ಷ ಸಿದ್ಧಬಸಪ್ಪ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ ಹಾಗೂ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.
ಜೊತೆಗೆ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದು ಮೃತರ ಕುಟುಂಬಕ್ಕೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕಾರ್ಯಕ್ಕೆ ಸಹಕರಿಸಿದ ಎಲ್ಲಾ ಶಿಕ್ಷಕರ ಸೇವಾ ಮನೋಭಾವನೆಯನ್ನು ಇಲಾಖೆಯು ಅಭಿನಂದಿಸಿದೆ.