ಶಿವಮೊಗ್ಗ: ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಮೌಲ್ಯಮಾಪನ ಕೇಂದ್ರದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆಯ ಶಿಕ್ಷಕ ಎನ್.ಎಂ. ಕುಮಾರ್(48) ಮೃತಪಟ್ಟವರು ಎಂದು ಹೇಳಲಾಗಿದೆ. ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯ ರಾಷ್ಟ್ರೀಯ ಬಾಲಕರ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಪತ್ರಿಕೆಯ ಮೌಲ್ಯಮಾಪನ ಕಾರ್ಯ ನಡೆದಿದ್ದು ಕುಮಾರ್ ಭಾಗವಹಿಸಿದ್ದರು.
ಅವರು ಮಧ್ಯಾಹ್ನ ಮೌಲ್ಯಮಾಪನ ಕೇಂದ್ರದಲ್ಲಿ ಕುಸಿದು ಬಿದ್ದಿದ್ದು ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಖಾಸಗಿ ಅನುದಾನರಹಿತ ಶಾಲೆಯಲ್ಲಿ ಅವರು ಕೆಲಸ ಮಾಡುತ್ತಿದ್ದು, ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.