ಮೈಸೂರು: ಕೊರೋನಾ ಕಾರಣದಿಂದ ಈ ಬಾರಿ ಸರಳವಾಗಿ ಸಾಂಪ್ರದಾಯಿಕ ದಸರಾ ಆಚರಿಸಲಾಗುತ್ತಿದೆ. ಪ್ರವಾಸಿಗರಿಗೆ ಈ ಮೊದಲು ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಇಂದಿನಿಂದ ಪ್ರವಾಸಿ ತಾಣಗಳು ಓಪನ್ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ.
ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶದ ಮೇರೆಗೆ ಪ್ರವಾಸಿ ತಾಣಗಳನ್ನು ಇಂದಿನಿಂದ ತೆರೆಯುವಂತೆ ಸೂಚಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಹಾಗೂ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಈ ಮೊದಲು ನವಂಬರ್ 1 ರವರೆಗೆ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿತ್ತು.
ಅನೇಕ ಸಂಘ-ಸಂಸ್ಥೆಗಳು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು ಮನವಿಗೆ ಸ್ಪಂದಿಸಿದ ಸಿಎಂ ಪ್ರವಾಸಿ ತಾಣಗಳ ವೀಕ್ಷಣೆಗೆ ಅವಕಾಶ ನೀಡಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.