ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಮೃದ್ಧಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ, ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಠ ಜಾತಿಯ ಮಹಿಳಾ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಹಾಗೂ ಮಹಿಳೆಯರ ನಿರುದ್ಯೋಗ ಸಮಸ್ಯೆಯ ನಿವಾರಣೆಗಾಗಿ ತಲಾ 10 ಸಾವಿರ ರೂ ಗಳ ಪ್ರೋತ್ಸಾಹ ಧನ ಒದಗಿಸಲು ಅರ್ಜಿ ಆಹ್ವಾನಿಸಿದೆ.
18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪೌರಾಡಳಿತ ಇಲಾಖೆಯಲ್ಲಿ ಬೀದಿ ಬದಿ ವ್ಯಾಪಾರಿ ಎಂದು ನೊಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು.
ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬಿ.ಪಿ.ಎಲ್. ಕಾರ್ಡ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು. ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಒಬ್ಬ ಫಲಾನುಭವಿ ಕೇವಲ ಒಂದು ಬಾರಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಜುಲೈ 31 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿಗಳು ಉಚಿತವಾಗಿ ದೊರೆಯಲಿವೆ.
ಹೆಚ್ಚಿನ ವಿವರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾ ಆಡಳಿತ ಭವನ ಮೊದಲನೆ ಮಹಡಿ, ಕೊಠಡಿ ಸಂಖ್ಯೆ: 129 ಚಾಮರಾಜನಗರ ಅಥವಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.