ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಜಾರಿ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಕೊರೊನಾ ಸೋಂಕು ಹರಡುತ್ತಿರುವ ಕಾರಣದಿಂದ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ಅನೇಕ ನೌಕರರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಆತಂಕದಿಂದ ಬಹುತೇಕ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿರುವುದರಿಂದ ಖಾಸಗಿ ಕಂಪನಿಗಳ ರೀತಿಯಲ್ಲಿ ಮನೆಯಿಂದಲೇ ಕೆಲಸ ಮಾಡಲು ನೌಕರರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆದಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರ ಈ ಕುರಿತು ಚಿಂತನೆ ನಡೆಸಿದೆ. ಸರ್ಕಾರಿ ಕಚೇರಿಗಳಿಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಷ್ಟೆಲ್ಲ ಎಚ್ಚರಿಕೆ ವಹಿಸಿದರೂ ಕೂಡ ಸೋಂಕು ಹಬ್ಬುವ ಆತಂಕ ಇದೆ. ಭಯ, ಆತಂಕದಿಂದ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕಿದ್ದರಿಂದ ಅನೇಕ ಇಲಾಖೆಗಳಲ್ಲಿ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಲಾಗುವುದು ಎನ್ನಲಾಗಿದೆ.
ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದು, ವರ್ಕ್ ಫ್ರಮ್ ಹೋಮ್ ಜಾರಿಗೆ ಚಿಂತನೆ ನಡೆದಿದೆ ಎನ್ನಲಾಗಿದೆ.