ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಜುಲೈ 15 ಮತ್ತು 16 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಜುಲೈ 19 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ ಸುಮಾರು 55 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಸುಮಾರು 3.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಹಾಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಅರಬ್ಬಿಸಮುದ್ರದ ಪೂರ್ವಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.