ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಹೋರಾಟ ತೀವ್ರಗೊಂಡಿದೆ.
ಕನ್ನಡಪರ ಹೋರಾಟಗಾರರು, ರೈತರು ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೂಡ ಪ್ರತಿಭಟನೆ ಕಾವು ಜೋರಾಗಿದ್ದು,, ತಮಿಳುನಾಡು ಸರ್ಕಾರದ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಕರವೇ ಎಚ್ಚರಿಕೆ ನೀಡಿದೆ.ಇನ್ನೂ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರಿದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಕೂಡ ಬಂದ್ ಆಗಿದೆ. ಹೊನ್ನಲಗೆರೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ ನಡೆಯುತ್ತಿದೆ.ಹೊನ್ನಲಗೆರೆಯಲ್ಲಿ ಬೆಳಗ್ಗೆಯಿಂದಲೇ ವ್ಯಾಪಾರ ವಹಿವಾಟು ಬಂದ್ ಆಗಿದೆ.