ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೀಗ ಇದೀಗ ರೈತ ಸಂಘಟನೆಗಳು ನಾಳೆ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದೆ.
ತಮಿಳುನಾಡಿನ ಒತ್ತಡಕ್ಕೆ ಮಣಿದು ಕರ್ನಾಟಕ ರಾಜ್ಯ ಸರ್ಕಾರವು ನೀರು ಬಿಡುಗಡೆಗೆ ಆದೇಶಿಸಿದ್ದು, ಒಂದು ವಾರದಿಂದಲೂ ನೀರು ಹರಿಯುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದು, ರಸ್ತೆಯಲ್ಲಿ ಅಡುಗೆ ಮಾಡುವ ಮೂಲಕ ಪ್ರತಿಭಟಿಸಲಿದ್ದಾರೆ. ಈ ಹಿನ್ನೆಲೆ ನಾಳೆ ವಾಹನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆದಿದೆ. ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಸಂಜಯ್ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಮತ್ತಿತರರಿದ್ದರು.