ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಶುರುವಾಗತೊಡಗಿದೆ. ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿರುವ ನಾರಾಯಣಗೌಡ ಅವರು ಬಿಜೆಪಿ- ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಹಸ್ಯ ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಿಜೆಪಿ -ಜೆಡಿಎಸ್ ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಅವರು ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡದಂತೆ ಒತ್ತಡ ಹಾಕಿದ್ದರು. ಆದರೆ, ಮಂಡ್ಯ ಕ್ಷೇತ್ರ ಬಹುತೇಕ ಜೆಡಿಎಸ್ ಪಾಲಾಗುವುದು ಖಚಿತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಲೋಕಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ಆದರೆ, ಟಿಕೆಟ್ ನೀಡಲು ಆಗಲ್ಲವೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿಎಂ ಸಲಹೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಸೇರಲು ಹೇಳಿದ್ದೆ. ಆಗ ಕಾಂಗ್ರೆಸ್ ಸೇರಿದ್ದರೆ ಇಷ್ಟೊತ್ತಿಗೆ ಶಾಸಕ, ಮಂತ್ರಿ ಆಗಿರುತ್ತಿದ್ದೆ. ಸದ್ಯಕ್ಕೆ ಟಿಕೆಟ್ ಕೊಡಲು ಆಗಲ್ಲ. ಮೊದಲು ಪಕ್ಷ ಸೇರಿ ಬಳಿಕ ಸ್ಥಾನಮಾನದ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
ಸಿಎಂ ಮಾತಿಗೆ ನಾರಾಯಣಗೌಡರು ಒಪ್ಪಿದ್ದಾರೆಯೇ ಇಲ್ಲವೇ ಎನ್ನುವುದು ಗೊತ್ತಾಗಿಲ್ಲ. ಈ ಕ್ಷಿಪ್ರ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.