ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಪೊಲೀಸರು ದಾಳಿ ನಡೆಸಿದ್ದ ವೇಳೆ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತ ಎಸ್ಕೇಪ್ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಆತ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆರ್.ಡಿ.ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ. ಒಂದು ವೇಳೆ ಪೊಲೀಸ್ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆರ್.ಡಿ.ಪಾಟೀಲ್ ವಿರುದ್ಧ ಸಾಕಷ್ಟು ಕೇಸ್ ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ಬಗ್ಗೆ ಕೆಇಎ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಪ್ರಮುಖ ಆರೋಗಳು ಯಾವುದೇ ಭಯವಿಲ್ಲದೇ ಇರುವುದಕ್ಕೆ ಈ ರೀತಿ ಅಕ್ರಮ ನಡೆಸಿದ್ದಾರೆ. ಇನ್ನುಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.