ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
ಕೆರಗೋಡು ಗ್ರಾಮದ ವಿವಾದಿತ ಸ್ಥಳಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಶಾಸಕ ಅಶ್ವತ್ಥನಾರಾಯಣ ಭೇಟಿ ನೀಡಿದ್ದು, ಹನುಮ ಧ್ವಜ ತೆರವು ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದಾರೆ.
ಆರ್.ಅಶೋಕ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಧ್ವಜಸ್ತಂಭದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.