
ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದು, ರೌಡಿ ಶೀಟರ್ ತೆರೆಯುವ ಬಗ್ಗೆ 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ನ ಮೈಸೂರು ಭಾಗದ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಕಾರ್ತಿಕ್, ಹರೀಶ್ ಅವರಿಗೆ ನೋಟಿಸ್ ನೀಡಲಾಗಿದೆ.
ಧ್ವಜಸ್ಥಂಭ ವಿಚಾರವಾಗಿ ಅನ್ಯಕೋಮಿನ ಜನರನ್ನು ಹೆದರಿಸಿ, ಬೆದರಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಪ್ರಚೋದನೆ ನೀಡಿದ್ದೀರಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವುದರಿಂದ ಏಕೆ ನಿಮ್ಮ ಮೇಲೆ ರೌಡಿಶೀಟರ್ ತೆರೆಯಬಾರದು? ನಿಮ್ಮ ಸಮಜಾಯಿಷಿಯನ್ನು ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಠಾಣೆಗೆ ಹಾಜರಾಗಿ ಮಾಹಿತಿ ನೀಡಬೇಕು ಎಂದು ಪೊಲೀಸರು ತಿಳಿಸಿದ್ದಾರೆ.