ಮಂಡ್ಯ: ಹನುಮ ಧ್ವಜ ವಿವಾದದಿಂದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ನಡೆಸಿದ ಲಾಠಿ ಪ್ರಹಾರಕ್ಕೆ ಗ್ರಾಮಸ್ಥರು ಹಾಗೂ ಹಲವು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ರಾಷ್ಟ್ರಧ್ವಜ ಹಾರಿಸಿದ್ದರು. ಈ ಘಟನೆ ಬೆನ್ನಲ್ಲೇ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ಕಿತ್ತೆಸೆದು ಧ್ವಜಸ್ತಂಭದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ.
ಬ್ಯಾರಿಕೆಡ್ ಗಳನ್ನು ತೆರವು ಮಾಡಿ, ಮುನ್ನುಗ್ಗುತ್ತಿದ್ದ ಗ್ರಾಮಸ್ಥರು, ಕಾರ್ಯಕರ್ತರನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಲಾಠಿ ಏಟಿಗೆ ಹಲವರಿಗೆ ತಲೆಯಿಂದ ರಕ್ತ ಚಿಮ್ಮಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ.
ಈ ನಡುವೆ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ವಿವಾದದ ಸ್ಥಳಕ್ಕೆ ಭೇಟಿ ನೀಡಿ, ಧ್ವಜಸ್ತಂಭದ ಬಳಿ ಹನುಮ ಧ್ವಜವನ್ನು ಮತ್ತೆ ಹಾರಿಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.