
ತಿರುವನಂತಪುರಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್ ಪೆಕ್ಟರ್ ನನ್ನು ವಜಾಗೊಳಿಸಲಾಗಿದೆ.
ಸರ್ಕಲ್ ಇನ್ಸ್ ಪೆಕ್ಟರ್ ಪಿ.ಆರ್. ಸುನು ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 86 ರ ಅಡಿಯಲ್ಲಿ ಒಬ್ಬ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿರುವುದು ರಾಜ್ಯ ಪೊಲೀಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂದು ಹೇಳಲಾಗಿದೆ.
ಬೇಪೋರ್ ಕರಾವಳಿ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಸುನು ಅವರನ್ನು ತಕ್ಷಣ ವಜಾಗೊಳಿಸಿ ಡಿಜಿಪಿ ಅನಿಲ್ ಕಾಂತ್ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಪಡೆಗಳಲ್ಲಿನ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ನವೆಂಬರ್‌ನಲ್ಲಿ ಮಾಜಿ ಸೈನಿಕನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನು ಅವರನ್ನು ಕೋಝಿಕ್ಕೋಡ್ ನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಕೆಲಸ ಕೊಡಿಸುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಕ್ಕಾಗಿ ಆಕೆಯ ಪತಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾಗ ಸುನು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಪ್ರಕರಣದಿಂದ ಪತಿಯನ್ನು ರಕ್ಷಿಸಲು ಸಹಾಯ ಮಾಡುವ ಭರವಸೆ ನೀಡಿ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ.