ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬರೇಗುಂಜಿ ಗ್ರಾಮದಲ್ಲಿ ನಡೆದಿದೆ.
ಸೌದೆ ತರಲೆಂದು ಕಾಡಿಗೆ ಹೋದವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಭಾನುವಾರ ಕಾಡಿಗೆ ಸೌದೆ ತರಲೆಂದು 21 ಜನರು ಹೋಗಿದ್ದರು. ಅವರಲ್ಲಿ ರಕ್ತದ ಮಾದರಿ ಪರೀಕ್ಷಿಸಿದಾಗ 7 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.
ಈ ಮೂಲಕ ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಪ್ರಕರಣ 19ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 74 ಜನರ ರಕ್ತದ ತಪಾಸಣೆ ನಡೆಸಲಾಗಿದೆ. ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಅಥವಾ ಕೆ ಎಫ್ ಡಿ ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಜಿಲ್ಲೆಯ ಗ್ರಾಮಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.