ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.
5 ಕೆಜಿ ಹೆಚ್ಚುವರಿ ಅಕ್ಕ ಬದಲಿಗೆ ಅನ್ನಭಾಗ್ಯ ಯೋಜನೆ ಅಡಿ ನೀಡುವ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸರ್ವರ್ ಸಮಸ್ಯೆಯಾಗಿದ್ದಲ್ಲಿ ಕೂಡಲೇ ಬಗೆಹರಿಸಬೇಕು. ಅನ್ನ ಭಾಗ್ಯ ಯೋಜನೆಯ ಎಲ್ಲಾ ಸಾಮಗ್ರಿಗಳನ್ನು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಪಡಿತರ ಚೀಟಿದಾರರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಆಹಾರ ಇಲಾಖೆಯ ಆಹಾರ ಧಾನ್ಯ ವಿತರಣೆ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ತಾಕೀತು ಮಾಡಿದ್ದಾರೆ.