ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮುನಿಯಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತಮ್ಮನ್ನು ವಿಶ್ವಾಸಕ್ಕೆ ಪಡೆಯದೆ ಕೋಲಾರ ಜಿಲ್ಲೆಯ ಎಂ.ಸಿ. ಸುಧಾಕರ್ ಮತ್ತು ಕೊತ್ತೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂಬುದು ಮುನಿಯಪ್ಪನವರ ಅಸಮಾಧಾನಕ್ಕೆ ಕಾರಣವಾಗಿದೆ. ಇದರಿಂದ ಅವರು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದಾರೆ. ಅಲ್ಲದೇ, ಮುನಿಯಪ್ಪ ಬಿಜೆಪಿಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಸಚಿವ ಡಾ.ಕೆ. ಸುಧಾಕರ್ ಮೊದಲಾದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸಂಜಯ್ ನಗರದಲ್ಲಿರುವ ಮುನಿಯಪ್ಪನವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಪಕ್ಷದಲ್ಲಿಯೇ ಮುಂದುವರೆಯಬೇಕು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆನ್ನಲಾಗಿದೆ.