ಬೆಂಗಳೂರು: ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 500 ಹುದ್ದೆಗಳಿದ್ದು, 200 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 300 ಹುದ್ದೆಗಳು ಖಾಲಿ ಇವೆ. ಈ ಖಾಲಿ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಇಲ್ಲವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಗ್ರಾಹಕರ ಹಿತರಕ್ಷಣೆ ಮಾಡುವ ಕಾನೂನು ಮಾಪನ ಶಾಸ್ತ್ರ ಇಲಾಖೆ ಸದೃಢಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಆರು ತಿಂಗಳೊಳಗೆ ನೇಮಕಾತಿ ಸೇರಿ ಇಲಾಖೆಯ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಪ್ರಸ್ತುತ ಕಾನೂನು ಮಾಪನ ಶಾಸ್ತ್ರ ಇಲಾಖೆ 100 ಕೋಟಿ ರೂ. ರಾಜಸ್ವ ಸಂಗ್ರಹಿಸುತ್ತಿದ್ದು, ಈ ವರ್ಷ 500 ಕೋಟಿ ರೂ. ಸಂಗ್ರಹ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.