ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಕೆಡಿಪಿ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಹೇಳಿದ್ದು, ಜುಲೈ 1ರಿಂದಲೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
8 ಕೆಜಿ ಅಕ್ಕಿ ಜತೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಎರಡು ಕೆಜಿ ಜೋಳ ವಿತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಡಚಣೆ ಎದುರಾದರೂ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.