ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರ ಮೊಬೈಲ್ ಆ್ಯಪ್ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕೃಷಿ ಹಾಗೂ ಸಹ ಇಲಾಖೆಗಳ ಫ್ರೂಟ್ಸ್ ತಂತ್ರಾAಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಸಮೀಕ್ಷೆಯನ್ನು ಕೈಗೊಳ್ಳಬಹುದಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪ ದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸುವುದರಿಂದ ಬೆಳೆ ವಿಮೆ ಪರಿಹಾರ, ಬೆಳೆ ಹಾನಿ ಪರಿಹಾರ ಹಾಗೂ ಇತರೆ ಕೃಷಿ/ತೋಟಗಾರಿಕೆ ಇಲಾಖೆಗಳ ಸವಲತ್ತುಗಳ ವಿತರಣೆಯಲ್ಲಿ ಯಾವುದೇ ವ್ಯತ್ಯಾಸಗಳಾಗದೇ ಸಂಪೂರ್ಣ ಪ್ರಯೋಜನ ದೊರೆಯಲಿದೆ.
ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2023 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.