ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಿಮ್ಸ್ ಆಸ್ಪತ್ರೆ ‘ಸಾರಿಗೆ ಸಂಜೀವಿನಿ’ ಹೆಸರಲ್ಲಿ ಒಡಂಬಡಿಕೆ ಮಾಡಿಕೊಂಡಿವೆ.
ಕಿಮ್ಸ್ ಜೊತೆಗಿನ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾಗವಹಿಸಿ ಮಾತನಾಡಿ, ಸಂಸ್ಥೆಯ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ನೀಡುವ ಪರಿಹಾರ ಮೊತ್ತವನ್ನು 3 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ.
ಸಾರಿಗೆ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 40 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಬೇಕು. ಸೇವಾವಧಿಯಲ್ಲಿ ನೌಕರರು ಅಪಘಾತದಿಂದ ಮೃತಪಟ್ಟಲ್ಲಿ ಅವರ ಕುಟುಂಬಗಳಿಗೆ ಒದಗಿಸುವ 50 ಲಕ್ಷ ರೂ. ಪರಿಹಾರ ಮೊತ್ತವನ್ನು ಒಂದು ಕೋಟಿ ರೂ. ಗೆ ಹೆಚ್ಚಳ ಮಾಡಬೇಕು ಎಂದು ತಿಳಿಸಿದ್ದಾರೆ.
ನೌಕರರಿಗೆ ಉತ್ತಮ ಆರೋಗ್ಯ ಮತ್ತು ಉತ್ತಮ ದರ್ಜೆಯ ಚಿಕಿತ್ಸೆಗಾಗಿ 106 ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರವು ಗುರುತಿಸಿರುವ 380ಕ್ಕೂ ಹೆಚ್ಚಿನ ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯಕ್ಕೆ ಅನುವು ಮಾಡಿಕೊಡಲಾಗಿದೆ.
NWKRTC ಸಂಸ್ಥೆಯು ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಒಟ್ಟು 21120 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಸುಮಾರು 15000 ನೌಕರರು ಚಾಲಕ-ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್., ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರಾದ ಡಾ. ಎಸ್. ಎಫ್.ಕಮ್ಮಾರ, ಕಿಮ್ಸ್ ಪ್ರಾಂಶುಪಾಲರಾದ ಡಾ. ಈಶ್ವರ ಹೊಸಮನಿ ಹಾಗೂ ಡಾ.| ಲಕ್ಷ್ಮೀಕಾಂತ ಲೋಕರೆ ಸೇರಿದಂತೆ ಕಿಮ್ಸ್ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.