
ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದ್ದು, ವಿವಿಧ ರಾಜ್ಯಗಳಿಂದ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗುವುದು. ಬೇಡಿಕೆ ಆಧರಿಸಿ ವಿದ್ಯುತ್ ಖರೀದಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಬೇಸಿಗೆ ಅವಧಿಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಇಂಧನ ಮಾರುಕಟ್ಟೆಯಿಂದ ವಿದ್ಯುತ್ ಸಂಗ್ರಹಣೆ, ವಿವಿಧ ರಾಜ್ಯಗಳಿಂದ ವಿನಿಮಯ ಮಾದರಿಯಲ್ಲಿ ವಿದ್ಯುತ್ ಪಡೆಯುವುದು, ರಾಜ್ಯದ ಉಷ್ಣ ವಿದ್ಯುತ್ ಉತ್ಪಾದನೆ ಗರಿಷ್ಠ ಮಟ್ಟಕ್ಕೆ ಹೆಚ್ಚಳ ಸೇರಿ ಹಲವು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
2024ರ ಫೆಬ್ರವರಿ, ಮಾರ್ಚ್, ಏಪ್ರಿಲ್ ನಲ್ಲಿ ವಿದ್ಯುತ್ ಬೇಡಿಕೆ ಸರಾಸರಿ 15,500 ಮೆಗಾ ವ್ಯಾಟ್ ನಿಂದ 16,500 ಮೆಗಾ ವ್ಯಾಟ್ ಗೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತೀವ್ರ ಮಳೆ ಕೊರತೆ ಮತ್ತು ಬರದ ನಡುವೆಯೂ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಳ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ಸೂಚನೆಯಂತೆ ನೀರಾವರಿ ಪಂಪ್ಸೆಟ್ ಫೀಡರ್ ಗಳಿಗೆ 7ಳು ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.